ಶ್ರಮಯೋಗಿ ಪಿಂಚಣಿ ಪಡೆಯಲು ಹೆಸರು ನೋಂದಾಯಿಸಿ
- ರಘುವೀರ ಸಿಂಗ್ ಠಾಕೂರ್
ಯಾದಗಿರಿ, ಡಿಸೆಂಬರ್ 18 (ಕರ್ನಾಟಕ ವಾರ್ತೆ): ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಭಾರತ ಸರ್ಕಾರವು “ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ಧನ್” ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಕಾರ್ಮಿಕರು ಈ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡು ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ ಸಿಂಗ್ ಠಾಕೂರ್ ಅವರು ಹೇಳಿದರು.
ನಗರದ ಇ.ಎಸ್.ಐ (ಬೀಡಿ ಕಾರ್ಮಿಕರ) ಆಸ್ಪತ್ರೆಯಲ್ಲಿ ಮಂಗಳವಾರ ಕಾರ್ಮಿಕ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿ.ಎಂ.ಎಸ್.ವೈ.ಎಂ) ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಯೋಜನೆ ಮಾಹಿತಿ ನೀಡಲು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದೆ. ನಮ್ಮ ದೈನಂದಿನ ಜೀವನದಲ್ಲಿ ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ಧಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮೋದ್ಯಮದ ಕಾರ್ಮಿಕರು, ಧ್ವನಿ ಮತ್ತು ದೃಶ್ಯ ಕಾರ್ಮಿಕರು ಮತ್ತು ಇದೇ ರೀತಿ ಇತರೆ ವಿವಿಧ ವಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧದ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಎಂಬ ಮಹತ್ವಾಕಾಂಕ್ಷಿ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುತ್ತದೆ. ಕೂಡಲೇ ಸಂಬಂಧಿಸಿದ ವಲಯಗಳ ಕಾರ್ಮಿಕರು ತಪ್ಪದೇ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.6ರಿಂದ 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ, ಅಪಾಯಕಾರಿ ಅಲ್ಲದ ಉದ್ದಿಮೆಗಳಲ್ಲಿ ತೊಡಗಿಸಿಕೊಳ್ಳದೆ ಅವರಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವಂತೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.ವೈದ್ಯಾಧಿಕಾರಿಗಳಾದ ಡಾ.ಕೆ.ವಿಕ್ರಾಂತ್, ಪಾವನಿ ಕೆ., ಫಾರ್ಮಾಸಿಸ್ಟ್ ವೆಂಕಟೇಶ, ಶಂಕರ ಕಲಗಿ, ಸುಧಾ, ಯಲ್ಲಾಲಿಂಗ, ಕಾರ್ಮಿಕ ಇಲಾಖೆಯ ಶಿವರುದ್ರ, ಜಿಲ್ಲಾ ಮೆಕ್ಯಾನಿಕ್ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಚವ್ಹಾಣ, ಕಾರ್ಯದರ್ಶಿ ಇಮ್ರಾನ್ ಖಾಜಿ ಡೈಮಂಡ್ ಹಾಗೂ ವಿವಿಧ ವಲಯಗಳ ಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ