ಜಿಲ್ಲಾ ಮಟ್ಟದ ಯುವಜನೋತ್ಸವ
ಯುವಜನರಲ್ಲಿರುವ ಕಲಾಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಿ
-:ರಾಜಶೇಖರಗೌಡ ಪಾಟೀಲ್ ವಜ್ಜಲ್
ಯಾದಗಿರಿ, ಡಿಸೆಂಬರ್ 26 (ಕರ್ನಾಟಕ ವಾರ್ತೆ): ಗ್ರಾಮೀಣ ಕ್ರೀಡೆಗಳು ಹಾಗೂ ವಿವಿಧ ಕಲಾ ಚಟುವಟಿಕೆಗಳು ದೇಶದ ಸಂಸ್ಕøತಿಯ ಪ್ರತೀಕವಾಗಿವೆ. ಯುವ ಜನರಲ್ಲಿ ಸುಪ್ತವಾಗಿರುವ ಇಂತಹ ಕಲಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಯುವಜನೋತ್ಸವದಂತಹ ಕಾರ್ಯಕ್ರಮಗಳು ಪೂರಕವಾಗುತ್ತವೆ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಇತ್ತೀಚೆಗೆ ಗ್ರಾಮೀಣ ಕ್ರೀಡೆಗಳು ಮತ್ತು ಕಲೆಗಳು ಮರೆಯಾಗುತ್ತಿವೆ. ಇವುಗಳನ್ನು ಬೆಳೆಸುವುದು ಇಂದಿನ ಅಗತ್ಯವಾಗಿದೆ. ಯುವಜನೋತ್ಸವ ಕಾರ್ಯಕ್ರಮಗಳಿಂದ ಯುವಕರಲ್ಲಿನ ಪ್ರತಿಭೆಗಳು ಹೊರಬರಲಿ ಎಂದು ಆಶಯ ವ್ಯಕ್ತಪಡಿಸಿದ ಅವರು, ಯುವಜನೋತ್ಸವದಂತಹ ಕಾರ್ಯಕ್ರಮಗಳು ನೆಪ ಮಾತ್ರಕ್ಕೆ ಆಯೋಜಿಸದೆ ಯುವ ಜನರ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಕಾರ್ಯಕ್ರಮವಾಗಬೇಕು. ಇಂತಹ ಕಾರ್ಯಕ್ರಮಗಳಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಿ, ರಾಜ್ಯಮಟ್ಟದಲ್ಲಿ ಜಿಲ್ಲೆಯ ಹೆಸರು ತರುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಟಿ.ಎನ್.ಭೀಮುನಾಯಕ್ ಮಾತನಾಡಿ, ರಾಜ್ಯದಲ್ಲಿ ಯಾದಗಿರಿ ಜಿಲ್ಲೆಯು ಹಿಂದುಳಿದ ಜಿಲ್ಲೆಯೆಂದು ಬಿಂಬಿಸಿಕೊಂಡಿದೆ. ಯುವ ಜನೋತ್ಸವದಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯ ಯುವ ಜನರ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಬೇಕು. ಈ ದೇಶದ ಭವಿಷ್ಯ ಯುವಜನರ ಮೇಲಿದೆ. ಅಂತಹ ಯುವಕರಲ್ಲಿರುವ ಪ್ರತಿಭೆಗಳನ್ನು ಗುರುತಿಸುವ ಕಾರ್ಯವಾಗಬೇಕು ಎಂದು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚನ್ನಬಸಪ್ಪ ಕುಳಗೇರಿ ಮಾತನಾಡಿ, ಯುವಜನೋತ್ಸವದಲ್ಲಿ ಶಾಸ್ತ್ರೀಯ ನೃತ್ಯ, ಶಾಸ್ತ್ರೀಯ ವಾದ್ಯ, ಶಾಸ್ತ್ರೀಯ ಗಾಯನ, ಆಶುಭಾಷಣ, ಏಕಾಂಕ ನಾಟಕ, ಜಾನಪದ ಗೀತೆ, ಜಾನಪದ ನೃತ್ಯ, ಭರತನಾಟ್ಯ, ತಬಲಾ, ಸಿತಾರ್, ಕೊಳಲು, ವೀಣೆ, ಹಾರ್ಮೋನಿಯಂ, ಗಿಟಾರ್, ಮೃದಂಗಮ್ ಹಾಗೂ ಕರ್ನಾಟಕ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಮನೋಹರ್, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಹಣಮಂತ, ಕ್ರೀಡಾ ಇಲಾಖೆಯ ಅಧೀಕ್ಷಕ ಗೋವಿಂದಪ್ಪ ಜಿ. ಅವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ