ಮಂಗಳವಾರ, ಡಿಸೆಂಬರ್ 10, 2019

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಕಾರ್ಯಾಗಾರ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಹಬ್ಬವೆಂದು ಸಂಭ್ರಮಿಸಿ
-:ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಯಾದಗಿರಿ, ಡಿಸೆಂಬರ್ ೧೦ (ಕರ್ನಾಟಕ ವಾರ್ತೆ): ಜಿಲ್ಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ಉತ್ತಮ ಫಲಿತಾಂಶ ಪಡೆಯಬೇಕು. ಪರೀಕ್ಷೆ ಎಂದರೆ ಭಯಪಡದೆ ಒಂದು ಹಬ್ಬವೆಂದು ಸಂಭ್ರಮಿಸಿ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಹೇಳಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಸ್ಟಿಸ್ ಶಿವರಾಜ ವಿ.ಪಾಟೀಲ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಉಚಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ತಪ್ಪದೇ ಶಾಲೆಗೆ ಹಾಜರಾಗಬೇಕು. ಶಿಕ್ಷಕರು ಹೇಳುವ ಪಾಠಗಳನ್ನು ಚಿತ್ತವಿಟ್ಟು ಆಸಕ್ತಿಯಿಂದ ಕಲಿಯಬೇಕು. ಗುಂಪು ಚರ್ಚೆ, ಪುನರ್‌ಮನನ ಮಾಡಿಕೊಳ್ಳುವ ಮೂಲಕ ಪರೀಕ್ಷೆಗೆ ಸಿದ್ಧರಾಗುವಂತೆ ಅವರು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಮಾತನಾಡಿ, ಎಸ್‌ಎಸ್‌ಎಲ್‌ಸಿ ಹಂತವು ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ಮಹತ್ವದ ಘಟ್ಟವಾಗಿದೆ. ಕಠಿಣ ಪರಿಶ್ರಮ ಹಾಗೂ ತ್ಯಾಗದಿಂದ ಅಭ್ಯಾಸ ಮಾಡಿ ಜಿಲ್ಲೆಗೆ ಉತ್ತಮ ಫಲಿತಾಂಶ ತಂದುಕೊಡಬೇಕು ಎಂದು ಕಿವಿಮಾತು ಹೇಳಿದರು.
ಖ್ಯಾತ ಮನೋವೈದ್ಯರಾದ ಡಾ.ಸಿ.ಆರ್.ಚಂದ್ರಶೇಖರ್ ಅವರು ಯಶಸ್ಸಿನ ಗುಟ್ಟು ಬಗ್ಗೆ ಸುದೀರ್ಘ ಉಪನ್ಯಾಸ ನೀಡಿ, ಮಕ್ಕಳ ಮಾನಸಿಕ ಸಾಮರ್ಥ್ಯವನ್ನು ಸದೃಢಗೊಳಿಸಲು ಆತ್ಮಸ್ಥೆöÊರ್ಯದ ನುಡಿಗಳನ್ನಾಡಿದರು. ಮಕ್ಕಳಲ್ಲಿರುವ ಪರೀಕ್ಷಾ ಭಯ ಎನ್ನುವ ಪ್ರಶ್ನೆಗಳಿಗೆ ಉತ್ತರಿಸುತ್ತಾ ಸಲಹೆಗಳನ್ನು ನೀಡಿದರು.
ಸರ್ವಜ್ಞ ಶಿಕ್ಷಣ ಸಂಸ್ಥೆಗಳ ಸಮೂಹ ಸಂಸ್ಥಾಪಕರು ಹಾಗೂ ಜಸ್ಟೀಸ್ ಶಿವರಾಜ್ ಪಾಟೀಲ್ ಫೌಂಡೇಶನ್ ಕಾರ್ಯದರ್ಶಿಗಳಾದ ಪ್ರೊ.ಚನ್ನಾರೆಡ್ಡಿ ಪಾಟೀಲ್ ಅವರು ಮಾತನಾಡಿ, ಮಕ್ಕಳು ತಮ್ಮ ಬದುಕಿನಲ್ಲಿ ಉತ್ತಮವಾದ ಗುರಿಗಳನ್ನು ಹೊಂದಿರಬೇಕು. ಛಲ ಮನಸ್ಸಿನಲ್ಲಿದ್ದರೆ ಸಾಧನೆಗೆ ಯಾವುದು ಅಡ್ಡಿ ಬರುವುದಿಲ್ಲ ಎಂದು ತಿಳಿಸಿದರು.
ಡಾ.ಸಿ.ಆರ್.ಚಂದ್ರಶೇಖರ್ ಅವರು ಬರೆದ “ಪರೀಕ್ಷಾ ಸಂಭ್ರಮ” ಪುಸ್ತಕವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಡಿ.ಎಂ.ಹೊಸಮನಿ, ಜಿಲ್ಲಾ ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿ ಡಾ.ಮಲ್ಲಪ್ಪ ಕೆ.ಯರಗೋಳ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಕನಕಪ್ಪ ಅವರು ಉಪಸ್ಥಿತರಿದ್ದರು. ಶಿಕ್ಷಣ ಇಲಾಖೆಯ ಅಧಿಕಾರಿಗಳು, ಜಸ್ಟೀಸ್ ಶಿವರಾಜ್ ಪಾಟೀಲ್ ಫೌಂಡೇಶನ್ ಪದಾಧಿಕಾರಿಗಳು ಹಾಗೂ ಯಾದಗಿರಿ ನಗರದ ಸುಮಾರು ೫೦೦ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...