ಭಾನುವಾರ, ಜನವರಿ 19, 2020

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲ್‌ಕುಮಾರ್ ಸೂಚನೆ
ಪ್ರವಾಹ ಹಾನಿ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ

ಯಾದಗಿರಿ, ಜನವರಿ ೧೮ (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಪ್ರವಾಹದಿಂದ ಉಂಟಾದ ರಸ್ತೆ ಮತ್ತು ಸೇತುವೆಗಳ ದುರಸ್ತಿ ಕಾಮಗಾರಿಗಳಿಗೆ ಶೀಘ್ರ ಟೆಂಡರ್ ಕರೆದು ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ.ಕೆ. ಅನಿಲ್‌ಕುಮಾರ್ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಸಂಬAಧಪಟ್ಟ ಅಧಿಕಾರಿಗಳೊಂದಿಗೆ ನಡೆಸಿದ ಪ್ರಮುಖ ವಿಷಯಗಳ ಚರ್ಚಾ ಸಭೆಯಲ್ಲಿ ಅವರು ಮಾತನಾಡಿದರು. ನೈಸರ್ಗಿಕ ವಿಕೋಪದಿಂದ ಹಾನಿಗೊಳಗಾದ ಕಾಮಗಾರಿಗಳಿಗಾಗಿ ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗಕ್ಕೆ  ಅಂದಾಜು ೨೯ ಕೋಟಿ ರೂ., ಲೋಕೋಪಯೋಗಿ ಇಲಾಖೆಗೆ ೯.೬೦ ಕೋಟಿ ರೂ.ಗಳ ಅನುದಾನ ಹಂಚಿಕೆಯಾಗಿದೆ. ಅನುದಾನ ಕೂಡ ಬಿಡುಗಡೆಯಾಗಿದ್ದು, ಕೈಗೊಂಡ ಒಟ್ಟು ೨೩೭ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕೆಂದು ಅವರು ತಾಕೀತು ಮಾಡಿದರು. ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗದ ಒಟ್ಟು ೨೨೦ ಕಾಮಗಾರಿಗಳ ಪೈಕಿ ೧೭೫ ಕಾಮಗಾರಿಗಳ ಅಂದಾಜು ಪಟ್ಟಿಗಳನ್ನು ಆಡಳಿತಾತ್ಮಕ ಅನುಮೋದನೆಗಾಗಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಲಾಗಿದೆ. ೪೫ ಕಾಮಗಾರಿಗಳ ಅಂದಾಜು ಪಟ್ಟಿ ತಯಾರಿಸುವ ಹಂತದಲ್ಲಿದೆ. ಲೋಕೋಪಯೋಗಿ ಇಲಾಖೆಯ ಒಟ್ಟು ೧೭ ಕಾಮಗಾರಿಗಳಲ್ಲಿ ೭ ಪೂರ್ಣಗೊಂಡಿದ್ದು, ೧೦ ಪ್ರಗತಿ ಹಂತದಲ್ಲಿವೆ ಎಂಬುದಾಗಿ ಸಂಬAಧಪಟ್ಟ ಇಲಾಖೆಗಳ ಇಂಜಿನಿಯರರು ಮಾಹಿತಿ ನೀಡಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಿ: ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅಗತ್ಯ ಕ್ರಮ ಕೈಗೊಳ್ಳಬೇಕು. ಶಾಲೆ ಮತ್ತು ವಸತಿನಿಲಯಗಳಲ್ಲಿ ನುರಿತ ಶಿಕ್ಷಕರಿಂದ ಇಂಗ್ಲಿಷ್, ಗಣಿತ ಮತ್ತು ವಿಜ್ಞಾನ ವಿಷಯಗಳ ವಿಶೇಷ ಬೋಧನೆ ಮಾಡಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ವಾರಕ್ಕೆ ಎರಡು ಬಾರಿ ಶಾಲೆಗಳಿಗೆ ಭೇಟಿ ನೀಡಿ, ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ನಿರ್ದೇಶಿಸಿದರು. ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಜನರ ಗುಳೆ ತಪ್ಪಿಸಲು ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಅನುಷ್ಠಾನಗೊಳಿಸಿ, ಪ್ರತಿಶತ ಗುರಿ ಸಾಧಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು. ಕುಡಿಯುವ ನೀರು ಪೂರೈಸುವುದಕ್ಕೆ ಯಾವುದೇ ರೀತಿಯ ತೊಂದರೆ ಉಂಟಾಗದAತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಸೂಚಿಸಿದರು.


ಆಯುಷ್ಮಾನ್ ಕಾರ್ಡ್ ನೋಂದಾಯಿಸಿ: ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದವರು ವರ್ಷದಲ್ಲಿ ೫ ಲಕ್ಷ ರೂ.ವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಬಹುದು. ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳು ೧.೫೦ ಲಕ್ಷ ರೂ.ವರೆಗೂ ಸಹಪಾವತಿ (ಶೆ.೭೦ರಷ್ಟು ಫಲಾನುಭವಿ ಭರಿಸತಕ್ಕದ್ದು, ಶೆ.೩೦ರಷ್ಟು ಸರ್ಕಾರ ಭರಿಸುತ್ತದೆ)ಯೊಂದಿಗೆ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಬಡವರ ಆರೋಗ್ಯ ರಕ್ಷಣೆಯಲ್ಲಿ ಈ ಯೋಜನೆ ಪ್ರಮುಖವಾಗಿರುವುದರಿಂದ ಸರ್ಕಾರ ಈ ಯೋಜನೆ ಬಗ್ಗೆ ವಿಶೇಷ ಕಾಳಜಿ ಹೊಂದಿದೆ. ಹಾಗಾಗಿ, ಸಾರ್ವಜನಿಕರಲ್ಲಿ ಹೆಚ್ಚಿನ ತಿಳಿವಳಿಕೆ ಮೂಡಿಸಿ ನೋಂದಾಯಿಸುವAತೆ ಟಿ.ಕೆ. ಅನಿಲ್‌ಕುಮಾರ್ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯಡಿ ಕಳೆದ ಸಾಲಿನಲ್ಲಿ ಕೈಗೊಂಡಿದ್ದ ಕೆರೆಗಳ ಹೂಳೆತ್ತುವ ಯೋಜನೆಗೆ ರೈತರಿಂದ ಹೆಚ್ಚಿನ ಬೇಡಿಕೆ ಇದೆ. ಹಾಗಾಗಿ, ಪ್ರಸಕ್ತ ಸಾಲಿನಲ್ಲಿ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಶೀಘ್ರದಲ್ಲಿಯೆ ಚಾಲನೆ ನೀಡಲಾಗುವುದು. ಕೆರೆಗಳ ಹೂಳೆತ್ತುವ ಜೊತೆಗೆ ನಾಲೆಗಳ ಹೂಳನ್ನು ಕೂಡ ತೆಗೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಂಟಿ ಕೃಷಿ ನಿರ್ದೇಶಕರಾದ ಆರ್.ದೇವಿಕಾ, ಭಾರತೀಯ ಜೈನ ಸಂಘಟನೆಯ ಜಿಲ್ಲಾ ಸಂಯೋಜಕರಾದ ರಾಜೇಶ್ ಜೈನ್, ಸಂಘಟನೆಯ ಜಿಲ್ಲಾಧ್ಯಕ್ಷರಾದ ಅಜೀತ್ ದೋಖಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...