ಜ.೭ರಂದು ಜಿಲ್ಲಾ ಮಟ್ಟದ ಯುವಜನ ಮೇಳ
ಯಾದಗಿರಿ, ಜನವರಿ ೦೪ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯ ಯುವಕ ಸಂಘಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಜನವರಿ ೭ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚಹ್ವಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ ವಜ್ಜಲ್, ರಾಯಚೂರು ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರಾದ ಡಾ.ಉಮೇಶ ಜಿ.ಜಾಧವ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಪಾಟೀಲ, ಬಿ.ಜಿ.ಪಾಟೀಲ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶ್ವಪ್ಪ ಅಚೋಲ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ್ ಭಗವಾನ್ ಸೋನವಣೆ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಜ.೧೧ರಿಂದ ಸಿಆರ್‌ಪಿ, ಬಿಆರ್‌ಪಿ, ಇಸಿಒ ಪರೀಕ್ಷೆ
ಯಾದಗಿರಿ, ಜನವರಿ ೦೪ (ಕರ್ನಾಟಕ ವಾರ್ತೆ): ಬೆಂಗಳೂರು ಕೆಎಸ್‌ಕ್ಯೂಎಎಸಿ ಕಾರ್ಯನಿರ್ವಾಹಕ ನಿರ್ದೇಶಕರ ವತಿಯಿಂದ ಸಿಆರ್‌ಪಿ, ಬಿಆರ್‌ಪಿ, ಇಸಿಒ ಪರೀಕ್ಷೆಗಳು ಜನವರಿ ೧೧ ಮತ್ತು ೧೨ರಂದು ಬೆಳಿಗ್ಗೆ ೧೦.೧೫ರಿಂದ ಸಂಜೆ ೫ ಗಂಟೆಯವರೆಗೆ ಯಾದಗಿರಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢ ವಿಭಾಗ ಕೇಂದ್ರದಲ್ಲಿ ನಡೆಯಲಿವೆ.
ಜಿಲ್ಲಾ ಮಟ್ಟದಲ್ಲಿ ಸಿಆರ್‌ಪಿ, ಬಿಆರ್‌ಪಿ, ಇಸಿಒ ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಪೊಲೀಸ್ ಬಂದೋಬಸ್ತ್ ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಉಪನಿರ್ದೇಶಕರು ಹಾಗೂ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೇ.೫೦ರ ರಿಯಾಯಿತಿ ದರದಲ್ಲಿ ಪುಸ್ತಕಗಳು ಲಭ್ಯ
ಯಾದಗಿರಿ, ಜನವರಿ ೦೪ (ಕರ್ನಾಟಕ ವಾರ್ತೆ): ಗಣರಾಜ್ಯೋತ್ಸವದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳು ಜನವರಿ ಪೂರ್ತಿ ತಿಂಗಳು ಶೇ.೫೦ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಅವರು ತಿಳಿಸಿದ್ದಾರೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ ಹಾಗೂ ಆಯಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಪ್ರಾಧಿಕಾರದ http://www.kannadapustakapradhikara.com ವೆಬ್‌ಸೈಟ್‌ನ ನಮ್ಮ ಪುಸ್ತಕ ವಿಭಾಗವನ್ನು ಆಯ್ಕೆ ಮಾಡಿ ಆನ್‌ಲೈನ್ ಮೂಲಕ ಕೂಡಾ ಶೇ.೫೦ರ ರಿಯಾಯಿತಿ ದರದ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ