ಭಾನುವಾರ, ಜನವರಿ 19, 2020

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಮಹಿಳೆಯರ ಅಭಿವೃದ್ಧಿ ಯೋಜನೆಗಳ ಜಾರಿಗೆ ಆದ್ಯತೆ ನೀಡಿ
-ಶಶಿಕಲಾ ಟೆಂಗಳಿ
ಯಾದಗಿರಿ, ಜನವರಿ ೧೭ (ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಯ ಮಹಿಳೆಯರು ಮುಗ್ಧರಾಗಿದ್ದು, ಅವರ ಅಭಿವೃದ್ಧಿಗಾಗಿ ಇರುವ ಯೋಜನೆಗಳ ಕುರಿತು ಹೆಚ್ಚಾಗಿ ಮಾಹಿತಿ ಇರುವುದಿಲ್ಲ. ಹೀಗಾಗಿ ಮಹಿಳೆಯರ ಅಭಿವೃದ್ಧಿಗೆ ಸರಕಾರ ಜಾರಿಗೆ ತಂದಿರುವ ಯೋಜನೆಗಳ ಅನುಷ್ಠಾನಕ್ಕೆ ಇಲಾಖೆಯ ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಶಿಕಲಾ ಟೆಂಗಳಿ ಅವರು ಸೂಚಿಸಿದರು.
ನಗರದ ಸ್ತಿçÃಶಕ್ತಿ ಭವನದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ದೇವದಾಸಿ ಪುನರ್ವಸತಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಮಹಿಳೆಯರು ಅನುಭವಿಸುವ ಕಷ್ಟಗಳ ಅರಿವು ನನಗಿದೆ. ಯೋಜನೆಗಳ ಫಲಾನುಭವಿಗಳ ಆಯ್ಕೆ ಸಮಿತಿಯ ಅಧ್ಯಕ್ಷರು ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರಾಗಿರುತ್ತಾರೆ. ಇದನ್ನು ಮಹಿಳಾ ಅಭಿವೃದ್ಧಿ ನಿಗಮದ ಅಧೀನಕ್ಕೆ ತರಲು ಪ್ರಯತ್ನಿಸುತ್ತೇನೆ. ಮಹಿಳೆಯ ಅಭಿವೃದ್ಧಿಗಾಗಿ ಇರುವ ಯೋಜನೆಗಳನ್ನು ಮಹಿಳೆಯರ ಮನೆ ಬಾಗಿಲಿಗೆ ತಲುಪಿಸಲು ಕ್ರಮ ವಹಿಸಲಾಗುವುದು. ಗ್ರಾಮೀಣ ಪ್ರದೇಶದ ವಸತಿ ರಹಿತ ಮಹಿಳೆಯರು ಗ್ರಾಮ ಪಂಚಾಯತಿ ಮಟ್ಟದಲ್ಲಿ ನಡೆಯುವ ಗ್ರಾಮ ಸಭೆಗಳಲ್ಲಿ ಭಾಗವಹಿಸಿ ವಸತಿ ಸೌಲಭ್ಯ ನೀಡುವಂತೆ ಅರ್ಜಿ ಸಲ್ಲಿಸಬೇಕು ಎಂದು ಅವರು ಹೇಳಿದರು.
ಚೇತನಾ, ಕಿರುಸಾಲ, ಸಮೃದ್ಧಿ, ಚೇತನ, ಉದ್ಯೋಗಿನಿ, ದೇವದಾಸಿ ಪುನರ್ವಸತಿ ಯೋಜನೆ, ಧನಶ್ರೀ, ಆಶಾಕಿರಣ ಸೇರಿದಂತೆ ವಿವಿಧ ಯೋಜನೆಗಳಿವೆ. ಸರಕಾರವು ಮಹಿಳಾ ಅಭಿವೃದ್ಧಿ ನಿಗಮಕ್ಕೆ ಸಾಕಷ್ಟು ಅನುದಾನ ನೀಡುತ್ತದೆ. ಮಹಿಳೆಯರು ತಮ್ಮ ಸಮಸ್ಯೆಗಳ ಕುರಿತು ಮನವಿ ನೀಡುವ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಭಾಕರ, ಜವಳಿ ಮತ್ತು ಕೈಮಗ್ಗ ಇಲಾಖೆಯ ಸಹಾಯಕ ನಿರ್ದೇಶಕರಾದ ಅಜೀತ್ ಜಿ.ನಾಯಕ, ಶಹಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗುರುರಾಜ, ಸುರಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುರುಗೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪದ್ಮಶ್ರೀ ಪ್ರಾರ್ಥಿಸಿದರು. ದೇವದಾಸಿ ಪುನರ್ವಸತಿಯ ಯೋಜನಾಧಿಕಾರಿ ಎಸ್.ಎನ್.ಹಿರೇಮಠ ಸ್ವಾಗತಿಸಿದರು. ಮಹಿಳಾ ಅಭಿವೃದ್ಧಿ ನಿಗಮದ ಆಪ್ತ ಸಮಾಲೋಚಕ ಶ್ರೀನಿವಾಸ ನಿರೂಪಿಸಿದರು. ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರಾದ ಶಿವಮಂಗಳಾ ಅವರು ವಂದಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...