ಶನಿವಾರ, ಜನವರಿ 4, 2020

ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಮಾನಸಿಕ ಒತ್ತಡ ನಿರ್ವಹಣೆಗೆ ಕ್ರೀಡೆಗಳಲ್ಲಿ ಭಾಗವಹಿಸಿ
-ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಯಾದಗಿರಿ, ಜನವರಿ ೦೪ (ಕರ್ನಾಟಕ ವಾರ್ತೆ): ಸರಕಾರಿ ನೌಕರರು ದಿನನಿತ್ಯದ ಕೆಲಸ ಕಾರ್ಯ ನಿರ್ವಹಣೆಯಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿರುತ್ತಾರೆ. ಪ್ರತಿಯೊಬ್ಬರಿಗೂ ಶಾರೀರಿಕ ಮತ್ತು ಮಾನಸಿಕ ಸದೃಢತೆ ಮುಖ್ಯ. ಈ ನಿಟ್ಟಿನಲ್ಲಿ ನೌಕರರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿರ್ವಹಣೆಗೆ ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ವಯಸ್ಸಿನ ಬೆಳವಣಿಗೆಯಾದಂತೆ ಕ್ರೀಡಾಚಟುವಟಿಕೆಗಳಲ್ಲಿ ಭಾಗವಹಿಸಲು ನಮ್ಮಲ್ಲಿ ಸಂಕುಚಿತ ಮನೋಭಾವ ಮೂಡುವುದು ಸಹಜ. ಕ್ರೀಡೆಗಳಲ್ಲಿ ಸೋಲು- ಗೆಲುವು ಮುಖ್ಯವಲ್ಲ. ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ತಮ್ಮಲ್ಲಿರುವ ಕ್ರೀಡಾ ಪ್ರತಿಭೆಯನ್ನು ಹೊರ ಹಾಕಲು ಸಾಧ್ಯವಾಗುತ್ತದೆ. ಕ್ರೀಡೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಹಬ್ಬ, ಉತ್ಸವ, ಜಾತ್ರೆಯಂತೆ ಆಚರಣೆ ಮಾಡಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು.
ನಮ್ಮದು ಹೊಸ ಜಿಲ್ಲೆಯಾಗಿರುವುದರಿಂದ ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನು ಏರ್ಪಡಿಸಲು ಎಲ್ಲರ ಸಹಕಾರ  ಬೇಕಾಗುತ್ತದೆ. ಕ್ರೀಡಾಂಗಣದ ಉನ್ನತೀಕರಣಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿAದ ಹೆಚ್ಚಿನ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು. ಡಿವೈಎಸ್‌ಪಿ ಯು.ಶರಣಪ್ಪ ಅವರು ಮಾತನಾಡಿ, ಮನುಷ್ಯ ದೈಹಿಕವಾಗಿ ಸದೃಢವಾಗಿದ್ದರೆ ಮಾನಸಿಕವಾಗಿ ಸದೃಢವಾಗಿರಲು ಸಾಧ್ಯ. ದಿನನಿತ್ಯದ ಕೆಲಸ ಕಾರ್ಯಗಳನ್ನು ಲವಲವಿಕೆಯಿಂದ ಮಾಡಲು ಕ್ರೀಡೆಗಳು ಸಹಕಾರಿಯಾಗಲಿವೆ. ಪ್ರತಿಯೊಬ್ಬರು ಪ್ರತಿದಿನ ಯಾವುದಾದರೊಂದು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ಶಿಕ್ಷಕರು ಮಕ್ಕಳೊಂದಿಗೆ ಮಕ್ಕಳಂತೆ ಆಟವಾಡಿ, ಪಾಠ ಮಾಡಬೇಕು. ಸದೃಢ ದೇಹದಲ್ಲಿ ಮಾತ್ರ ಸದೃಢ ಮನಸ್ಸಿರುತ್ತದೆ. ಹೀಗಾಗಿ ಎಲ್ಲರೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗುವುದು ಅಗತ್ಯವಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷರಾದ ಮಹಿಪಾಲರಡ್ಡಿ ಮಾಲಿ ಪಾಟೀಲ್ ಅವರು ಮಾತನಾಡಿ, ಹಿಂದೆ ಯೋಗ ಮಾಡುವುದರಿಂದ ಮನುಷ್ಯರು ನೂರು ವರ್ಷಗಳ ಕಾಲ ಬದುಕುತ್ತಿದ್ದರು. ಆದರೆ, ಇಂದಿನ ಒತ್ತಡದ ಜೀವನಕ್ಕೆ ಸಿಲುಕಿ ಕ್ರೀಡೆಗಳಿಂದ ವಿಮುಖರಾಗುತ್ತಿದ್ದೇವೆ. ಆಯುಷ್ಯ ವೃದ್ಧಿಗೆ ಯೋಗ ಮತ್ತು ಕ್ರೀಡಾಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ. ಆಟಗಳಲ್ಲಿ ಸಕ್ರಿಯರಾಗಿದ್ದರೆ ಸರಕಾರಿ ಕಾರ್ಯಗಳ ಸರಳ ನಿರ್ವಹಣೆಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಜಿಲ್ಲೆಯಿಂದ ೧೦೦, ೨೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಪ್ರತಿನಿಧಿಸಿದ ಗುರುಮಠಕಲ್‌ನ ಸಿಪಿಎಸ್ ಶಾಲೆಯ ಸಹಶಿಕ್ಷಕರಾದ ನಾಗೇಶ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚನ್ನಬಸ್ಸಪ್ಪ ಕುಳಗೇರಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷರಾದ ಪರಮರಡ್ಡಿ ಕಂದಕೂರ, ಕಾರ್ಯಾಧ್ಯಕ್ಷರಾದ ಆರ್.ಎಂ.ನಾಟೇಕಾರ, ರಾಜ್ಯ ಪರಿಷತ್ ಸದಸ್ಯರಾದ ಸಂತೋಷ ನೀರಟಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷರಾದ ರಾಚಣ್ಣಗೌಡ, ಬಸವರಾಜ ಕೆರೂಟಗಿ, ಸಂತೋಷಸಿAಗ್ ಚವ್ಹಾಣ, ಬಿ.ಸಾಬರಡ್ಡಿ, ದೈಹಿಕ ಶಿಕ್ಷಣ ಶಿಕ್ಷಕ ಹಣಮಂತ ಹೊಸಮನಿ ಅವರು ಉಪಸ್ಥಿತರಿದ್ದರು.ಬೆನಕನಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಚಂದ್ರಕಲಾ ಅವರು ಪ್ರಾರ್ಥನಾ ಗೀತೆ ಹಾಡಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಕೋಶಾಧ್ಯಕ್ಷರಾದ ಯಾಮರಡ್ಡಿ ಸ್ವಾಗತಿಸಿದರು. ಹೊನಗೇರಾ ಸರಕಾರಿ ಪ್ರೌಢ ಶಾಲೆಯ ಶಿಕ್ಷಕರಾದ ಮಲ್ಲಿಕಾರ್ಜುನ ಕವಲಿ ನಿರೂಪಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...