ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ
ಜ.೨೧ರಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ
ಯಾದಗಿರಿ, ಜನವರಿ ೧೩ (ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಜನವರಿ ೨೧ರಂದು ಬೆಳಿಗ್ಗೆ ೧೧ ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಂದು ಬೆಳಿಗ್ಗೆ ೯ ಗಂಟೆಗೆ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ಹೊಸ ತಾಲ್ಲೂಕುಗಳು ಸೇರಿದಂತೆ ತಾಲ್ಲೂಕು ಮಟ್ಟದಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲು ಆಯಾ ತಹಶೀಲ್ದಾರರು ಕ್ರಮ ವಹಿಸುವಂತೆ ಅವರು ಸೂಚಿಸಿದರು.
ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಸಭಿಕರಿಗೆ ಟೀ, ಟಿಫಿನ್ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ವಹಿಸಿದರು. ಜಯಂತಿಯಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ತಿಳಿಸಿದರು.
ಜಯಂತಿ ಕಾರ್ಯಕ್ರಮದ ನಿರೂಪಕರು ಹಾಗೂ ಉಪನ್ಯಾಸಕರನ್ನು ನೇಮಿಸಬೇಕು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ, ನಿಗದಿತ ದಿನಾಂಕದೊಳಗೆ ವಿತರಿಸಬೇಕು. ಜಯಂತಿಯನ್ನು ವಿಜೃಂಭಣೆ ಮತ್ತು ಅರ್ಥಪೂರ್ಣವಾಗಿ ಆಚರಿಸಲು ತಯಾರಿ ಮಾಡಿಕೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ ಅವರಿಗೆ ಸೂಚಿಸಿದರು.
ಜಿಲ್ಲಾ ಟೋಕರಿ, ಕೋಲಿ, ಕಬ್ಬಲಿಗ ಸಮಾಜದ ಅಧ್ಯಕ್ಷ ಉಮೇಶ ಕೆ.ಮುದ್ನಾಳ ಅವರು ಮಾತನಾಡಿ, ಹೊಸ ತಾಲ್ಲೂಕು ಕೇಂದ್ರಗಳು ಮತ್ತು ಗ್ರಾಮೀಣ ಪ್ರದೇಶದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸುತ್ತೋಲೆ ಹೊರಡಿಸುವಂತೆ ಕೋರಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗೌರಮ್ಮ ದೊಂತಾ ಅವರು ಸಭೆಯ ನಡಾವಳಿ ಓದಿದರು. ಡಿಡಿಪಿಯು ಚಂದ್ರಶೇಖರ ಜೆ.ಹಿಳ್ಳಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿ.ರೇವಣ್ಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಶ್ವನಾಥ ಕಡ್ಡಿ ಅವರು ಉಪಸ್ಥಿತರಿದ್ದರು.
ಜಿಲ್ಲಾ ಕೋಲಿ ಸಮಾಜದ ಅಧ್ಯಕ್ಷ ಹನುಮಂತ ಮಡ್ಡಿ, ಗೌರವಾಧ್ಯಕ್ಷ ಸಿ.ಎಂ.ಪಟ್ಟೇದಾರ, ಸಮಾಜದ ಮುಖಂಡರಾದ ದೇವಿಂದ್ರಪ್ಪ ಬೆಸ್ತ, ಶರಣಪ್ಪ ಮೋಟ್ನಳ್ಳಿ, ಮೌಲಾಲಿ ಅನಪೂರ, ಚಂದ್ರಶೇಖರ ಬಾಡಿಯಾಳ, ಹಣಮಂತಪ್ಪ ಬಳಿಚಕ್ರ, ಸುರೇಶ ಕೋಟಿಮನಿ, ಭೀಮಾಶಂಕರ ದೋರನಹಳ್ಳಿ, ಸುರೇಶ ಮಡ್ಡಿ, ಚಂದ್ರಕಾAತ ಮಡ್ಡಿ, ದೇವಿಂದ್ರಪ್ಪ ಬಳಿಚಕ್ರ ಅವರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ