ಸೋಮವಾರ, ಜನವರಿ 6, 2020

ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರ ಅಧ್ಯಕ್ಷತೆಯಲ್ಲಿ ಸಭೆ
ವಸತಿ ಯೋಜನೆ ಅರ್ಹ ಫಲಾನುಭವಿಗಳ ಪರಿಶೀಲನೆಗೆ ಸೂಚನೆ
ಯಾದಗಿರಿ, ಜನವರಿ ೦೬ (ಕರ್ನಾಟಕ ವಾರ್ತೆ): ವಸತಿ ಯೋಜನೆ (ನಗರ ಮತ್ತು ಗ್ರಾಮೀಣ) ಯಡಿ ಆಯ್ಕೆಯಾಗಿ ವಿವಿಧ ಹಂತದಲ್ಲಿರುವ ಮನೆಗಳನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಜಂಟಿಯಾಗಿ ವಿಜಿಲ್ ಆ್ಯಪ್ ಮೂಲಕ ಸರ್ವೇ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ವಸತಿ ಇಲಾಖೆ ಯೋಜನೆ ಅನುಷ್ಠಾನ ಇಲಾಖೆ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ ೮೨೬, ಸುರಪುರ ತಾಲ್ಲೂಕಿನಲ್ಲಿ ೭೮೮ ಹಾಗೂ ಯಾದಗಿರಿ ತಾಲ್ಲೂಕಿನಲ್ಲಿ ೨೮೦ ವಸತಿ ಯೋಜನೆಯಡಿ ಗುರಿಗಳನ್ನು ನಿಗದಿಪಡಿಲಾಗಿದೆ. ಮನೆ ನಿರ್ಮಿಸಿಕೊಳ್ಳುತ್ತಿರುವ ಫಲಾನುಭವಿಗಳಿಗೆ ಹಂತ ಹಂತವಾಗಿ ಅನುದಾನ ಬರುತ್ತಿಲ್ಲ ಎಂದು ದೂರು ಬರುತ್ತಿವೆ. ಆದ್ದರಿಂದ ಗ್ರಾಮ ಪಂಚಾಯಿತಿಗಳಿಗೆ ನಿಗದಿಪಡಿಸಿದ ಗುರಿಯಂತೆ ಜಂಟಿಯಾಗಿ ಸರ್ವೇ ನಡೆಸಿ, ನಿರ್ಮಾಣ ಹಂತದಲ್ಲಿರುವ ಮನೆಗಳನ್ನು ಜಿಪಿಎಸ್ ಮಾಡಬೇಕು. ಫಲಾನುಭವಿಗಳ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಗಳ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ಈ ಕಾರ್ಯ ಎರಡು ದಿನಗಳಲ್ಲಿ ಪೂರ್ಣಗೊಳಿಸುವಂತೆ ಎಂದು ಅವರು ನಿರ್ದೇಶಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗುರುನಾಥ ಗೌಡಪ್ಪನವರ್, ತಹಶೀಲ್ದಾರರಾದ ಚನ್ನಮಲ್ಲಪ್ಪ ಘಂಟಿ, ಸಂಗಮೇಶ ಜಿಡಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...