ಮಂಗಳವಾರ, ಫೆಬ್ರವರಿ 25, 2020

ಏಕ್ ಭಾರತ-ಶ್ರೇಷ್ಠ ಭಾರತ ಕಾರ್ಯಕ್ರಮ
ಶಾಲಾ ಮಕ್ಕಳಲ್ಲಿ ದೇಶಪ್ರೇಮ ಬೆಳೆಸಲು ಸಲಹೆ
ಯಾದಗಿರಿ, ಫೆಬ್ರುವರಿ 25 (ಕರ್ನಾಟಕ ವಾರ್ತೆ): ಇತ್ತೀಚೆಗೆ ದೇಶಭಕ್ತಿ, ರಾಷ್ಟ್ರಪ್ರೇಮ ಕಡಿಮೆಯಾಗುತ್ತಿರುವುದರಿಂದ ಶಾಲಾ ಮಕ್ಕಳಲ್ಲಿ ದೇಶಪ್ರೇಮದ ಬಗ್ಗೆ ಅರಿವು ಮೂಡಿಸುವುದು ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ವಾರ್ತಾ ಮತ್ತು ಪ್ರಸಾರ ಸಚಿವಾಲಯದಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಶಾಸಕರಾದ ನಾಗನಗೌಡ ಕಂದಕೂರ ಅವರು ಅಭಿಪ್ರಾಯಪಟ್ಟರು.
ಯಾದಗಿರಿ ತಾಲ್ಲೂಕಿನ ಕಂದಕೂರ ಗ್ರಾಮದಲ್ಲಿ ಮಂಗಳವಾರ ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಲಬುರಗಿ ವಿಭಾಗ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ, ಯಾದಗಿರಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನೆ, ಕಂದಕೂರ ಗ್ರಾಮ ಪಂಚಾಯಿತಿ, ಸರಕಾರಿ ಪ್ರೌಢಶಾಲೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ “ಏಕ್ ಭಾರತ-ಶ್ರೇಷ್ಠ ಭಾರತ” ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮಾತನಾಡಿ, ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಖಂಡನೀಯವಾಗಿದೆ. ಇಂತಹ ವಿಚಾರಗಳನ್ನು ವಿದ್ಯಾರ್ಥಿಗಳಲ್ಲಿ ಮೂಡದ ಹಾಗೆ ಮತ್ತು ನಮ್ಮ ದೇಶಪ್ರೇಮವನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಅವಶ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಸರಸ್ವತಿ ಎಸ್.ಕಟಕಟಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಈಶ್ವರ್, ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯದ ಕ್ಷೇತ್ರ ಪ್ರಚಾರ ಅಧಿಕಾರಿ ಶೃತಿ ಎಸ್.ಟಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವನಜಾಕ್ಷಿ ಬೆಂಡಿಗೇರಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಾಬವ್ವ ಶರಣಪ್ಪ, ಉಪಾಧ್ಯಕ್ಷರಾದ ಲಕ್ಷ್ಮೀ ನಿಂಗಪ್ಪ, ಪ್ರೌಢಶಾಲೆ ಮುಖ್ಯಗುರು ಎಸ್.ಎಂ.ಬೂತಲ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹ್ಮದ್ ಅಲಿ ಜಮಾದಾರ, ಸಿಆರ್‍ಪಿ ಹಣಮಾ ನಾಯಕ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಸರಕಾರಿ ಪ್ರೌಢಶಾಲೆ ಸಹಶಿಕ್ಷಕರಾದ ಮಧುಮತಿ ಮತ್ತು ಗಂಗಾಧರ ಅವರು ಉಪನ್ಯಾಸ ನೀಡಿದರು. ಭಾಷಣ, ಚಿತ್ರಕಲಾ, ದೇಶಭಕ್ತಿ ಗೀತೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಏಕ್ ಭಾರತ-ಶ್ರೇಷ್ಠ ಭಾರತ ಕಾರ್ಯಕ್ರಮ ಅಂಗವಾಗಿ ಚಲನಚಿತ್ರ ಮತ್ತು ಛಾಯಾಚಿತ್ರ ಪ್ರದರ್ಶನ ಹಾಗೂ ಗ್ರಾಮದಲ್ಲಿ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...