ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ
ಫೆ.21ರಂದು ಕಾಯಕ ಶರಣರ ಜಯಂತಿ
ಯಾದಗಿರಿ, ಫೆಬ್ರುವರಿ 14 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ವತಿಯಿಂದ ಕಾಯಕ ಶರಣರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಫೆಬ್ರುವರಿ 21ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾಯಕ ಶರಣರ ಜಯಂತ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು. ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಂದು ಬೆಳಿಗ್ಗೆ ಕಾಯಕ ಶರಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಕಾಯಕ ಶರಣರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ತಾಲ್ಲೂಕು ಮಟ್ಟದಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾಡಳಿತ ಕಾರ್ಯಕ್ರಮದ ಪೂರ್ವದಲ್ಲಿ ನಗರದಲ್ಲಿ ಕಾಯಕ ಶರಣರ ಭಾವಚಿತ್ರದ ಮೆರವಣಿಗೆ ಮಾಡಿದರೆ, ಸಮಾಜದ ಸಂಘಟನೆಗೆ ಒಂದು ದಿನ ಮುಂಚಿತವಾಗಿ ಟ್ರ್ಯಾಕ್ಟರ್ ನೀಡಬೇಕು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಅಥವಾ ಇನ್ನಿತರೆ ಒಂದು ನುರಿತ ಕಲಾವಿದರ ತಂಡವನ್ನು ಏರ್ಪಾಡು ಮಾಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಸಭಿಕರಿಗೆ ಅಲ್ಪ ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ವಹಿಸಲಾಯಿತು. ಜಯಂತಿ ಮತ್ತು ಮೆರವಣಿಗೆಯಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ತಿಳಿಸಲಾಯಿತು. ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ ಸಿಂಗ್ ಠಾಕೂರ್ ಅವರು ಸಭೆಯ ನಡಾವಳಿ ಓದಿದರು. ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ದತ್ತಪ್ಪ ಕಲ್ಲೂರ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿ.ರೇವಣ್ಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಗೌರಮ್ಮ ದೊಂತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ