2 ಕುಟುಂಬಗಳ ವಿರುದ್ಧ ಪ್ರಕರಣ ದಾಖಲು
ಮನೆಯಲ್ಲಿದ್ದು ಕೊರೊನಾ ಹರಡುವುದನ್ನು ತಡೆಗಟ್ಟಿ
-:ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಯಾದಗಿರಿ, ಮಾರ್ಚ್ 29 (ಕರ್ನಾಟಕ ವಾರ್ತೆ): ನೋವೆಲ್ ಕೊರೊನಾ ವೈರಸ್ ಅನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸರ್ಕಾರದ ಆದೇಶದಂತೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮನೆಯಲ್ಲಿದ್ದು ಸೋಂಕು ಹರಡುವುದನ್ನು ತಡೆಗಟ್ಟಬೇಕು. ಅನವಶ್ಯಕವಾಗಿ ಮನೆಯಿಂದ ಹೊರಬಂದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್ನಿಂದ ತಪ್ಪಿಸಿಕೊಳ್ಳಲು ಅಂತರ ಕಾಯ್ದುಕೊಳ್ಳುವುದು ಮತ್ತು ಮನೆಯಲ್ಲಿರುವುದೊಂದೇ ಸದ್ಯದ ಪರಿಹಾರವಾಗಿದೆ. ಸರ್ಕಾರದ ನಿರ್ಬಂಧಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿ, ಸಂಸ್ಥೆ, ಸಂಘಟನೆಯ ವಿರುದ್ಧ ಸಾಂಕ್ರಾಮಿಕ ರೋಗಗಳ ಅಧಿನಿಯಮ, ವಿಕೋಪ ನಿರ್ವಹಣಾ ಅಧಿನಿಯಮ, ಭಾರತೀಯ ದಂಡ ಸಂಹಿತೆ 188ನೇ ಪ್ರಕರಣ ಮತ್ತು ಇತರ ಸಂಬಂಧಪಟ್ಟ ಸಂಹಿತೆಗಳು, ಅಧಿನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
2 ಕುಟುಂಬಗಳ ವಿರುದ್ಧ ಪ್ರಕರಣ ದಾಖಲು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 2 ಕುಟುಂಬಗಳು ಖಾಸಗಿ ವಾಹನದಲ್ಲಿ ಜಿಲ್ಲೆಗೆ ಬಂದಿದ್ದು, ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಯಾದಗಿರಿ ಮತ್ತು ಗುರುಮಠಕಲ್ ತಾಲ್ಲೂಕಿನವರಾದ ಇವರನ್ನು ಸದ್ಯ ಅರಕೇರಾ (ಕೆ) ವಸತಿ ಶಾಲೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಯಾದಗಿರಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ ಅನುಸಾರ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
3 ವ್ಯಕ್ತಿಗಳ ಮಾದರಿ ನೆಗೆಟಿವ್: ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿರುವುದಿಲ್ಲ. ಪರೀಕ್ಷೆ ಮಾಡಲು ಸಂಗ್ರಹಿಸಿದ ಒಟ್ಟು 5 ವ್ಯಕ್ತಿಗಳ ಮಾದರಿಗಳಲ್ಲಿ 3 ನೆಗೆಟಿವ್ ಫಲಿತಾಂಶ ಬಂದಿವೆ. 2 ವ್ಯಕ್ತಿಗಳ ಮಾದರಿ ಪರೀಕ್ಷೆಯ ವರದಿ ಬರಬೇಕಿದೆ ಎಂದು ಅವರು ಮಾಹಿತಿ ನೀಡಿದರು.
ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ: ಜಿಲ್ಲೆಯಲ್ಲಿ ಕೋವಿಡ್-19 ಕೊರೊನಾ ವೈರಾಣುವಿನ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಯಾದಗಿರಿ ಆಯುμï ಆಸ್ಪತ್ರೆ, ಭೀಮರಾಯನಗುಡಿ ಯು.ಕೆ.ಪಿ ಆಸ್ಪತ್ರೆ ಮತ್ತು ಸುರಪುರದ ನಗರ ಆರೋಗ್ಯ ಕೇಂದ್ರದಲ್ಲಿ ಜ್ವರ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ಹೊರ ಜಿಲ್ಲೆ, ಹೊರ ರಾಜ್ಯ ಮತ್ತು ಹೊರ ದೇಶಗಳಿಂದ ಬರುವ ಪ್ರಯಾಣಿಕರು ಮತ್ತು ಹೆಚ್ಚಿನ ಜ್ವರ ಹೊಂದಿರುವ ಸಾರ್ವಜನಿಕರು ಈ ಕೇಂದ್ರಗಳಲ್ಲಿ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದರು.
ಅಗತ್ಯವಸ್ತುಗಳ ದಾನ ಮಾಡಲು ಸಂಪರ್ಕಿಸಿ: ಜಿಲ್ಲೆಯಲ್ಲಿ ಲಾಕ್‍ಡೌನ್ ಘೋಷಣೆಯಾದ ಪ್ರಯುಕ್ತ ಸಾರ್ವಜನಿಕರಿಗೆ ಅವಶ್ಯಕ ಸಾಮಗ್ರಿಗಳನ್ನು ಅಥವಾ ಚೆಕ್ ಮೂಲಕ ದೇಣಿಗೆಗಳನ್ನು (ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿ-ಕೋವಿಡ್-19ಗೆ) ಸ್ವಇಚ್ಛೆಯಿಂದ ನೀಡಲು ಮುಂದೆ ಬರುವ ಎನ್‍ಜಿಓ, ಸಂಘ- ಸಂಸ್ಥೆಗಳು, ಜನಪ್ರತಿನಿಧಿಗಳು, ಇಚ್ಛಿತ ವ್ಯಕ್ತಿಗಳು ಹಾಗೂ ಸಾರ್ವಜನಿಕರು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಶರಣಪ್ಪ ಪಾಟೀಲ್ ಮೊ:9902193325 ಮತ್ತು ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರ್‍ಸಿಂಗ್ ಅವರ ಮೊ:9448911558 ಸಂಪರ್ಕಿಸಬಹುದು ಎಂದು ಅವರು ಕೋರಿದರು.
ಸಾರ್ವಜನಿಕರು ಕಿರಾಣಿ ಅಂಗಡಿ, ಔಷಧಿ, ಹಾಲಿನ ಅಂಗಡಿ, ದಿನಸಿ ಅಂಗಡಿಗಳು ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳನ್ನು ಖರೀದಿಸಲು ಹೋದಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಹಾಗೂ ಸರ್ಕಾರದ ಎಲ್ಲಾ ನಿರ್ಬಂಧಗಳನ್ನು ತಪ್ಪದೇ ಪಾಲಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ:08473-253950 ಗೆ ಕರೆ ಮಾಡಿ ಸಹಾಯ ಪಡೆಯಬಹುದು. ಕೊರೊನಾ ವೈರಸ್‍ಗೆ ಸಂಬಂಧಪಟ್ಟಂತಹ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾಡಳಿತದಿಂದ ವಾಟ್ಸ್‍ಆ್ಯಪ್ ಸಂಖ್ಯೆ ಆರಂಭಿಸಲಾಗಿದ್ದು, ಸಾರ್ವಜನಿಕರು ಫೋಟೊ ಅಥವಾ ಮೆಸೇಜ್‍ಗಳನ್ನು 9449933946 ಈ ಸಂಖ್ಯೆಗೆ ಕಳುಹಿಸುವ ಮೂಲಕ ನಿವೇದಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.
ವಿದೇಶದಿಂದ ಜಿಲ್ಲೆಗೆ ಬಂದವರ ಮನೆಗೆ ಸ್ಟಿಕ್ಕರ್ ಅಂಟಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಇವರನ್ನು ದಿನಕ್ಕೆ 2 ಬಾರಿಯಂತೆ 14 ದಿನಗಳ ಕಾಲ ವೈದ್ಯಕೀಯ ತಂಡ ಭೇಟಿ ನೀಡಿ ತಪಾಸಣೆ ನಡೆಸುತ್ತಿದೆ. ವಿದೇಶದಿಂದ ಬಂದವರೆಲ್ಲರೂ ಅವರ ಮನೆಯಲ್ಲಿಯೆ ಪ್ರತ್ಯೇಕವಾಗಿರಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಎಲ್ಲಾ ಪ್ರಯಾಣಿಕ ಸಾರಿಗೆ ಸೇವೆಗಳನ್ನು ನಿಲ್ಲಿಸಲಾಗಿದೆ. ಸರಕು ಸಾಗಣೆ ಮತ್ತು ಅಗತ್ಯ ಸೇವೆಗಳಿಗೆ ವಿನಾಯಿತಿ ಇದ್ದು ಅಗತ್ಯ ವಸ್ತುಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡುಬಂದರೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ನಾರಾಯಣಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿವೇಕಾನಂದ ಟೆಂಗೆ ಅವರು ಉಪಸ್ಥಿತರಿದ್ದರು.