ಯರಗೋಳ ಚೆಕ್‍ಪೋಸ್ಟ್‍ಗೆ ಜಿಲ್ಲಾಧಿಕಾರಿ ಭೇಟಿ
ಯಾದಗಿರಿ, ಮಾರ್ಚ್ 18 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ರಸ್ತೆ ಮಾರ್ಗದ ಯಾದಗಿರಿ ತಾಲ್ಲೂಕಿನ ಯರಗೋಳ ಗ್ರಾಮದಲ್ಲಿ ಸ್ಥಾಪಿಸಿರುವ ಸ್ಕ್ರೀನಿಂಗ್ ಚೆಕ್‍ಪೋಸ್ಟ್‍ಗೆ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಬುಧವಾರ ಭೇಟಿ ನೀಡಿ, ಪರಿಶೀಲಿಸಿದರು.
ಚೆಕ್‍ಪೋಸ್ಟ್‍ಗಳಲ್ಲಿ 2,468 ಜನರ ತಪಾಸಣೆ
ಯಾದಗಿರಿ, ಮಾರ್ಚ್ 18 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಕೊರೋನಾ ವೈರಸ್ ಕುರಿತು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸ್ಥಾಪಿಸಿರುವ 6 ಚೆಕ್‍ಪೋಸ್ಟ್‍ಗಳಲ್ಲಿ ಬುಧವಾರ 2,468 ಜನರನ್ನು ತಪಾಸಣೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾದಗಿರಿ ನಗರದ ರೈಲ್ವೆ ನಿಲ್ದಾಣ, ಜಿಲ್ಲಾ ನ್ಯಾಯಾಲಯ, ಹೊಸ ಬಸ್ ನಿಲ್ದಾಣ ಹಾಗೂ ಯರಗೋಳ, ಇಟಗಾಲ್ ಕ್ರಾಸ್, ಮುಡಬೂಳ ಗ್ರಾಮಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದ್ದು, ಜನರನ್ನು ತಪಾಸಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಶಂಕಿತ ಅಥವಾ ಖಚಿತ ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿರುವುದಿಲ್ಲ. ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ್ಡಿದ್ದು, ಸಾರ್ವಜನಿಕರು ಆತಂಕ ಪಡಬಾರದು. ರೋಗಲಕ್ಷಣಗಳು ಕಂಡುಬಂದಲ್ಲಿ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಅಥವಾ 24*7 ಉಚಿತ ಆರೋಗ್ಯ ಸಹಾಯವಾಣಿ 104 ಕರೆ ಮಾಡಬಹುದು ಎಂದು ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಮಾರ್ಚ್ 18ರವರೆಗೆ ಯಾದಗಿರಿ ತಾಲ್ಲೂಕಿನಲ್ಲಿ 18, ಶಹಾಪೂರ ತಾಲ್ಲೂಕಿನಲ್ಲಿ 14 ಹಾಗೂ ಸುರಪುರ ತಾಲ್ಲೂಕಿನಲ್ಲಿ 16 ಸೇರಿದಂತೆ ಒಟ್ಟು 48 ಜನ ದುಬೈ, ಕತಾರ, ಸೌದಿ, ಮದಿನಾ ಪ್ರವಾಸದಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ರೋಗಲಕ್ಷಣಗಳು ಕಂಡುಬಂದಿರುವುದಿಲ್ಲ. ಕಾರಣ ಇವರಿಗೆ ಹೋಮ್ ಐಸೊಲೇಷನ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಿನಕ್ಕೆ 2 ಬಾರಿಯಂತೆ ಇವರನ್ನು 14 ದಿನಗಳ ಕಾಲ ವೈದ್ಯಕೀಯ ತಂಡ ಭೇಟಿ ನೀಡಿ ತಪಾಸಣೆ ನಡೆಸಲಿದೆ ಎಂದು ಅವರು ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ