ಗುರುವಾರ, ಜನವರಿ 21, 2021

 ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ; ಕೆ.ಧಾಮೋಧಾರ

ಯಾದಗಿರಿ.ಜ.21 (ಕ.ವಾ):- ವಾಹನ ಮಾಲೀಕರು ಹಾಗೂ ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ಧಾಮೋಧಾರ ಸಲಹೆ ನೀಡಿದರು.

ನಗರದ ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ಅವರು ಮಾತನಾಡಿದರು.

ಸರ್ಕಾರದ ಆದೇಶದಂತೆ ಪ್ರತಿವರ್ಷವೂ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಿಸಲಾಗುತ್ತದೆ. ಒಂದು ತಿಂಗಳ ಕಾಲ ಕಾರ್ಯಕ್ರಮದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರಸ್ತೆ ನಿಯಮಗಳ ಕುರಿತು ಚಾಲಕರಿಗೆ ಮತ್ತು ವಾಹನ ಮಾಲೀಕರಿಗೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಅನೇಕ ಅಪಘಾತಗಳು ಮಾನವ ತಪ್ಪುಗಳಿಂದಲೇ ಆಗುತ್ತವೆ. ಅಮಾಯಕರು ಜೀವ ಕಳೆದುಕೊಂಡು ಅವಲಂಬಿಸಿರುವವರನ್ನು ಬೀದಿಪಾಲು ಮಾಡುತ್ತಾರೆ. ಚಾಲಕರು ವಾಹನದಲ್ಲಿ ಕುಳಿತ ಕೂಡಲೇ ತಮ್ಮ ಕುಟುಂಬ ಮತ್ತು ಅವಲಂಬಿತರನ್ನು ನೆನಪಿಸಿಕೊಳ್ಳಬೇಕು. ಎಲ್ಲಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಕುಡಿದು ವಾಹನ ಚಾಲನೆ ಮಾಡುವುದು, ಮೊಬೈಲ್‌ನಲ್ಲಿ ಮಾತನಾಡುತ್ತಾ ಚಾಲನೆ ಮಾಡುವುದನ್ನು ಕಡ್ಡಾಯವಾಗಿ ನಿಲ್ಲಿಸಬೇಕು ಎಂದು ಸೂಚಿಸಿದರು.

ಚಾಲಕರು ರಸ್ತೆ ನಿಯಮಗಳನ್ನು ಹಾಗೂ ಸಂಚಾರ ಚಿಹ್ನೆಗಳನ್ನು ಚೆನ್ನಾಗಿ ಅರಿತುಕೊಳ್ಳಬೇಕು. ಸ್ವಲ್ಪವೂ ಬೇಜವಾಬ್ದಾರಿ ಅಥವಾ ನಿರ್ಲಕ್ಷ್ಯತೆ ತೋರದೆ ನಿಯಮ ಪಾಲನೆ ಮಾಡಬೇಕು. ದ್ವಿಚಕ್ರವಾಹನ ಸವಾರರು ಹೆಲ್ಮೆಟ್ ಧರಿಸಿರಬೇಕು. ಸಂಚಾರ ನಿಯಮಗಳನ್ನು ಪಾಲನೆ ಮಾಡಿದರೆ ಸಾಕಷ್ಟು ಅಪಘಾತಗಳನ್ನು ತಡೆಗಟ್ಟಬಹುದು ಎಂದರು.


ಇದೇ ಸಂದರ್ಭದಲ್ಲಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಸುಭಾಷ್ ಚಂದ್ರ ಕಾಲಗಿ, ಆರ್.ಟಿ.ಒ ಸಿಬ್ಬಂದಿಗಳಾದ ಮೌನೇಶ, ಶಿವಕುಮಾರ್, ಆನಂದ, ರಾಮಕೃಷ್ಣ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...