ಗುರುವಾರ, ಫೆಬ್ರವರಿ 18, 2021

 ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ


ಯಾದಗಿರಿ.ಫೆ.18 (ಕ.ವಾ):- ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರಿ ನೌಕರರ ಎರಡು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಗುರುವಾರ ಚಾಲನೆ ದೊರೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸಹಯೋಗದಲ್ಲಿ ನಡೆದ ಈ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ನಂತರ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಮಾತನಾಡಿ, ವರ್ಷಪೂರ್ತಿ ಒತ್ತಡದಿಂದ ಕೆಲಸ ಮಾಡುವ ನೌಕರರಿಗೆ ಕ್ರೀಡಾಕೂಟ ಪುನಃಶ್ಚೇತನ ಕಾರ್ಯಕ್ರಮದಂತೆ ಇದ್ದು, ಕ್ರೀಡೆಗಳಲ್ಲಿ ಗೆಲ್ಲುವುದು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ಹಾಗೆಯೇ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಪಾಲ್ಗೊಳ್ಳಬೇಕು. ದಿನನಿತ್ಯದ ಕರ್ತವ್ಯದಿಂದ ಹೆಚ್ಚಿನ ಒತ್ತಡಕ್ಕೆ ಒಳಗಾಗುವುದು ಸಹಜ. ಎಲ್ಲರೂ ಕೂಡಿ ಆಟ ಆಡಿ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರೆ ಮನಸ್ಸು ಪುನಃಶ್ಚೇತನಗೊಳ್ಳುತ್ತದೆ ಎಂದರು.
ನೌಕರರು ಕ್ರೀಡಾಕೂಟಕ್ಕೆ ಹೆಚ್ಚಿನ ಒತ್ತು ನೀಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಕ್ರೀಡಾಪಟುಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಕ್ರೀಡಾ ಕೂಟದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದರು. ಇಲಾಖೆಯ ಕಾರ್ಯನಿರ್ವಹಿಸುತ್ತಿರುವ ನೌಕರರು ಹಲವು ಒತ್ತಡಗಳಿಂದ ಹೊರ ಬಂದು ನೆಮ್ಮದಿಯುಳ್ಳ ಜೀವನ ನಡೆಸಬೇಕಾದರೆ ಕ್ರೀಡೆ ಅತಿ ಅವಶ್ಯಕವಾಗಿದೆ ಎಂದು ಹೇಳಿದರು.
ಸರ್ಕಾರಿ ನೌಕರರಿಗೆ ಎರಡು ದಿನಗಳ ಕಾಲ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಈ ನಿಟ್ಟಿನಲ್ಲಿ ನೌಕರರಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರದರ್ಶಿಸಲು ಸೂಕ್ತ ವೇದಿಕೆಯಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಎಸ್.ಪಾಟೀಲ್ ಯಡಿಯಾಪೂರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿದರು.
ಜಿಲ್ಲಾ ಪಂಚಾಯತ ಉಪಾಧ್ಯಕ್ಷರಾದ ಗಿರಿಜಮ್ಮಾ ರೋಟ್ನಡಗಿ, ನಗರಸಭೆ ಅಧ್ಯಕ್ಷರಾದ ವಿಲಾಸ ಬಿ. ಪಾಟೀಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಚಂಡ್ರಿಕಿ, ಜಿಲ್ಲಾ ಪಂಚಾಯತ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಿವಲಿಂಗಪ್ಪ ಪುಟಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಋಷಕೇಶ ಭಗವಾನ್ ಸೋನಾವಣೆ, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಮಹಿಪಾಲರಡ್ಡಿ ಮಾಲಿ ಪಾಟೀಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜು ಬಾವಿಹಳ್ಳಿ ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...