ವಿಶ್ವ ಕ್ಷಯರೋಗ ಮುಕ್ತ ದಿನಾಚರಣೆಗೆ ಜಿಲ್ಲಾಧಿಕಾರಿ ಚಾಲನೆ
ಸೂಕ್ತ ಚಿಕಿತ್ಸೆ ಪಡೆದು, ಕಾಯಿಲೆ ದೂರ ಮಾಡಿ
;ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.
ಯಾದಗಿರಿ.ಮಾ.24 (ಕ.ವಾ):- ಸಕಾಲದಲ್ಲಿ ತಜ್ಞ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆದರೆ ಯಾವುದೇ ಕಾಯಿಲೆ ದೂರಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಕ್ಷಯರೋಗ ಮುಕ್ತ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಎದೆ ನೋವು, ತೂಕ ಕಡಿಮೆಯಾಗುವುದು, ಕಫದಲ್ಲಿ ರಕ್ತ ಬೀಳುವುದು, ಹಲವಾರು ದಿನಗಳಿಂದ ಕೆಮ್ಮು, ಜ್ವರದ ಬಾಧೆಯಿಂದ ಬಳಲುತ್ತಿರುವ ವ್ಯಕ್ತಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ನಿಯಮಿತ ಅವಧಿಯವರೆಗೆ ಚಿಕಿತ್ಸೆ ಪಡೆದರೆ ಕ್ಷಯರೋಗ ಸಂಪೂರ್ಣ ಗುಣಪಡಿಸಬಹುದು ಎಂದರು.
ಕ್ಷಯರೋಗ ಮುಕ್ತ ಮಾಡಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಶ್ರಮಿಸುತ್ತಿರುವ ಕಾರಣ ಜಿಲ್ಲೆ 27 ನೇ ಸ್ಥಾನ ದಿಂದ 19 ನೇ ಸ್ಥಾನಕ್ಕೆ ಬರಲು ಕಾರಣವಾಗಿದೆ. ಅಲ್ಲದೆ ಕೊರೊನಾ ಲಸಿಕೆ ನೀಡಿಕೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಶ್ರಮ ಮೆಚ್ಚುವಂತದ್ದು ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ದೇಶದಲ್ಲಿ ಕ್ಷಯರೋಗ ನಿರ್ಮೂಲನೆ ಮಾಡಲು ಸರ್ಕಾರ ಈಗಾಗಲೇ ಕ್ರಮ ತೆಗೆದುಕೊಂಡಿದ್ದು, ರೋಗ ನಿರ್ಮೂಲನೆಗಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ರೋಗಿಗಳಲ್ಲಿ ತಾರತಮ್ಯ ತೋರದೆ ಕೈ ಜೋಡಿಸಿ ಕೆಲಸ ಮಾಡುವುದು ಅವಶಕ್ಯವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ ಕ್ಷಯರೋಗ ನಿರ್ಮೂಲನೆಗೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಇತರೆ ಸ್ಥಳಗಳಲ್ಲಿ ಜಾಗೃತಿ ಅವಶ್ಯಕತೆ ಇದ್ದು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಕ್ಷಯರೋಗ ನಿರ್ಮೂಲನೆ ಶ್ರಮಿಸಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕ್ಷಯರೋಗ ಬಗ್ಗೆ ಅತ್ಯುತ್ತಮ ಸೇವೆ ಸಲ್ಲಿಸಿದ ಆರೋಗ್ಯ ಸಿಬ್ಬಂದಿಗಳಿಗೆ, ಕಿರಿಯ ಆರೋಗ್ಯ ಸಹಾಯಕರಿಗೆ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಕ್ಷಯರೋಗ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.
ಅರಿವು ಜಾಥಾ: ಇದ್ದಕ್ಕೂ ಮುನ್ನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆವರಣದಲ್ಲಿ ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಚಾಲನೆ ನೀಡಿದರು.
ಕ್ಷಯರೋಗ ಗುಣಪಡಿಸಬಹುದಾದ ಕಾಯಿಲೆ, ಧೂಮಪಾನದಿಂದ ಆರೋಗ್ಯಕ್ಕೆ ಹಾನಿಕಾರಕ, ಕೆಮ್ಮುವಾಗ ಬಾಯಿಗೆ ಕರವಸ್ತ್ರ ಅಡ್ಡವಿಟ್ಟುಕೊಳ್ಳಬೇಕು, ಕ್ಷಯ ರೋಗ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತ, ಇವೇ ಮೊದಲಾದ ಭಿತ್ತಿಫಲಕ ಗಳನ್ನು ಹಿಡಿದು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗಿದರು. ಜಾಥಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಿಂದ ನಗರಸಭೆ ರಸ್ತೆಯ ಮೂಲಕ ಗಾಂಧಿ ವೃತ್ತದವರೆಗೂ ತಲುಪಿತು.
ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಇಂದುಮತಿ ಕಾಮಶಟ್ಟಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಲಕ್ಷ್ಮೀಕಾಂತ್, ಜಿಲ್ಲಾ ಕುಷ್ಠರೋಗ ನಿರ್ಮೂನಾಧಿಕಾರಿ ಡಾ.ಭಗವಂತ ಅನ್ವರ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ನಾಗರಾಜ ಬಿ.ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಮುಬಷೀರ ಅಹಮ್ಮದ್ ಸಾಜೀದ್, ಐ.ಎಮ್.ಎ ಅಧ್ಯಕ್ಷ ಸಿ.ಎಂ ಪಾಟೀಲ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ