ಎಸ್‌ಸಿಪಿ ಮತ್ತು ಟಿಎಸ್‌ಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ
ಅನುದಾನ ಬಳಸಿ ನಿಗದಿತ ಗುರಿ ಸಾಧಿಸಲು ಅಧಿಕಾರಿಗಳಿಗೆ ಸೂಚನೆ
:ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.
ಯಾದಗಿರಿ.ಮಾ.09 (ಕ.ವಾ):- ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯ ಅನುದಾನ ಬಳಕೆಯಲ್ಲಿ ಶೇ.100ರಷ್ಟು ಗುರಿ ಸಾಧಿಸಬೇಕು. ಅನುದಾನ ಬಳಸಲು ಮಾರ್ಚ್ 31 ರವರೆಗೆ ಕಾಯದೇ ಕೂಡಲೇ ಗುರಿಯನ್ನು ಸಾಧಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಮತ್ತು ಗಿರಿಜನ ಉಪ ಯೋಜನೆ (ಟಿಎಸ್‌ಪಿ) ಮಾಸಿಕ, ದೌರ್ಜನ್ಯ ನಿಯಂತ್ರಣ, ಅಲೆಮಾರಿ ಕೋಶ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಫಲಾನುಭವಿಗಳ ಪಟ್ಟಿ ಸಿದ್ಧವಿರುವುದರಿಂದ ಅನುದಾನ ಬಳಸಬೇಕು. ಅಡಚಣೆ ಇದ್ದರೆ ನೇರವಾಗಿ ತಮ್ಮ ಗಮನಕ್ಕೆ ತರಬೇಕು. ಸಂಬAಧಿಸಿದ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಸಮಸ್ಯೆ ಪರಿಹರಿಸಲಾಗುವುದು ಎಂದು ತಿಳಿಸಿದರು.
ಎಲ್ಲಾ ಇಲಾಖೆಯವರು ಕಟ್ಟುನಿಟ್ಟಾಗಿ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯ ಕಾಮಗಾರಿಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನುದಾನ ಕೈತಪ್ಪಿ ಹೋಗಬಾರದು. ವರ್ಷದ ಕೊನೆಯವರೆಗೆ ಅನುದಾನ ವೆಚ್ಚ ಮಾಡಲು ಕಾಯದೆ ಅನುದಾನ ಬಂದ ನಂತರ ಅಥವಾ ಆಡಳಿತಾತ್ಮಕ ಮಂಜೂರಾತಿ ಸಿಕ್ಕ ತಕ್ಷಣ ಅನುಷ್ಠಾನಕ್ಕಾಗಿ ಕ್ರಮ ಕೈಗೊಂಡು ಸರ್ಕಾರದ ಆಶಯದಂತೆ ಅಭಿವೃದ್ಧಿಗೆ ಶ್ರಮಿಸಬೇಕೆಂದು ತಿಳಿಸಿದರು.
ಎಸ್‌ಸಿಪಿ ಹಾಗೂ ಟಿಎಸ್‌ಪಿಯ ಯೋಜನೆಯಡಿ ನೀಡಲಾದ ಕ್ರಿಯಾ ಯೋಜನೆಯಂತೆ ಆಯಾ ಇಲಾಖೆಯವರು ಅನುಷ್ಟಾನಕ್ಕೆ ಕ್ರಮ ಕೈಗೊಂಡು ಪ್ರಗತಿ ವರದಿಯನ್ನು ಪ್ರತಿ ತಿಂಗಳು ಸಮಾಜಕಲ್ಯಾಣ ಇಲಾಖೆಗೆ ಕಳುಹಿಸಬೇಕೆಂದು ಸೂಚನೆ ನೀಡಿದರು.
ಪರಿಶಿಷ್ಟ ಜಾತಿ ಹಾಗೂ ಪಂಗಡದ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ
ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಪರಿಶಿಷ್ಟ ಜಾತಿ ಹಾಗೂ ಪಂಗಡದ ದೌರ್ಜನ್ಯ ತಡೆ ಕಾಯ್ದೆಯ ಜಿಲ್ಲಾ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ನಡೆಸಲಾಯಿತು.
ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂತ್ರಸ್ತರ ಸಮಸ್ಯೆ, ಅವರಿಗೆ ನೀಡಿರುವ ಪರಿಹಾರ, ನ್ಯಾಯಾಲಯ ಪ್ರಕರಣಗಳ ಕುರಿತಂತೆ ಅವರಿಗಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ದೌರ್ಜನ್ಯ ತಡೆ ಕಾಯ್ದೆ ಪ್ರಕರಣಗಳಲ್ಲಿ ಸಂತ್ರಸ್ತರು ಕೋರ್ಟಿಗೆ ಬಂದಿದ್ದಾಗ ಸರ್ಕಾರಿ ಅಭಿಯೋಜಕರು ನೀಡುವ ಹಾಜರಾತಿ ಪ್ರತಿಯನ್ನು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ವಾರಕ್ಕೊಮ್ಮೆ ಸಂಗ್ರಹಿಸಿ ಸಂಬAಧಿತರಿಗೆ ಪ್ರಯಾಣಭತ್ಯೆ ಮೊತ್ತವನ್ನು ವಿತರಿಸಲು ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಅಲೆಮಾರಿ ಕೋಶ ಸಭೆ:ಜಿಲ್ಲೆಯಲ್ಲಿ ಒಟ್ಟು 42,581 ಜನ ಅಲೆಮಾರಿ ಜನಸಂಖ್ಯೆ ಇದ್ದು, ಇವರಿಗೆ ನಿವೇಶನ ಹಂಚಿಕೆಗಾಗಿ ಜಿಲ್ಲೆಯ ಹಂಚಿನಾಳ, ಮುಡಬೂಳ, ಖಾನಪೂರ ಹಾಗೂ ಬೇವಿನಹಳ್ಳಿ ಗ್ರಾಮಗಳಲ್ಲಿ ನಿವೇಶನ ರಹಿತ ಅಲೆಮಾರಿ ಜನಾಂಗದವರಿಗೆ ನಿವೇಶನಕ್ಕಾಗಿ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದರು.
ಜಿಲ್ಲೆಯಲ್ಲಿ ಗೊಲ್ಲ, ಹೆಳವ, ಜೋಗಿ, ಬೈಲತರ್, ಶಿಕ್ಕಲಿಗರ್, ಘಿಸಾಡಿ, ಗೊಂದಳಿ, ದುರ್ಗಮುರ್ಗ, ಕಟಬು, ದರ್ವೆಶ್, ಬುಡ್ಬುಕಿ ಜನಾಂಗದವರು ವಾಸವಾಗಿದ್ದಾರೆ ಎಂದು ಅವರು ವಿವರಿಸಿದರು.
ಅಲೆಮಾರಿ ವಿದ್ಯಾರ್ಥಿಗಳಿಗಾಗಿ 2 ರಿಂದ 10 ನೇ ತರಗತಿ ವರೆಗಿನ ಸುಮಾರು 1,563 ವಿದ್ಯಾರ್ಥಿಗಳಿಗೆ 33.26 ಲಕ್ಷ ರೂ. ಪ್ರೋತ್ಸಾಹಧನ ಜಮಾ ಮಾಡಲಾಗಿದೆ ಎಂದು ಜಿಲ್ಲಾ ಸಮಾಜದ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಾಗವಾನ ಸೋನಾವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚನ್ನಬಸವ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರಭು ದೊರೆ, ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತೆ ಶ್ವೇತಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್. ಸೇರಿದಂತೆ ದೌರ್ಜನ್ಯ ಸಮಿತಿಯ ನಾಮನಿರ್ದೇಶನ ಸದಸ್ಯರಾದ ಖಂಡಪ್ಪ ದಾಸನ್, ನಾಗಣ್ಣ ಬಡಿಗೇರ, ರಮೇಶ ದೊರೆ, ರಮಾದೇವಿ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ