ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಿಸಿ : ಕೋವಿಡ್ ನಿಯಮ ಪಾಲಿಸಲು ಜಿಲ್ಲಾಧಿಕಾರಿ ಸೂಚನೆ
ಯಾದಗಿರಿ; ಸೆಪ್ಟೆಂಬರ್, 03 ( ಕರ್ನಾಟಕ ವಾರ್ತಾ); ಮಹಾಮಾರಿ ಕೊರೋನಾ ಹಬ್ಬುವ ಆತಂಕದಿಂದ ಈ ಬಾರಿ ಹಬ್ಬಗಳ ಆಚರಣೆಗೆ ಮಾರ್ಗಸೂಚಿಗಳನ್ನು ಸರ್ಕಾರ ಹೊರಡಿಸಿದ್ದು, ಈ ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ಪಾಲಿಸಿ ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಿಸಿ ಕೋವಿಡ್
ನಿಯಮ ಪಾಲಿಸಲು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.ಅವರು ಸೂಚಿಸಿದರು.
ಗೌರಿ- ಗಣೇಶ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ ಮಾರ್ಗಸೂಚಿಗಳನ್ನು ವಿವರಿಸಿದರು.
ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು. ಇದನ್ನು ಹೊರತುಪಡಿಸಿ, ಬೇರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಹೊರಾಂಗಣಗಳಲ್ಲಿ ಚಪ್ಪರ, ಪೆಂಡಾಲ್, ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ - ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ.
ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯಮೆರವಣಿಗೆ,ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
ಪಾರಂಪರಿಕ ಗೌರಿ- ಗಣೇಶ ಮೂರ್ತಿಯನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಅಥವಾ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಹತ್ತಿರದ ಸ್ಥಳೀಯ ಸಂಸ್ಥೆಗಳ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ, ಕಲ್ಯಾಣಿ ಅಥವಾ ಮೊಬೈಲ್ ಟ್ಯಾಂಕ್ ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜಿಸತಕ್ಕದ್ದು.
ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ, ಸ್ಯಾನಿಟೈಸೇಷನ್ ಮಾಡತಕ್ಕದ್ದು. ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸತಕ್ಕದ್ದು.
ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್- 19 ಸಮುಚಿತ ವರ್ತನೆಯಂತೆ ಕಡ್ಡಾಯವಾಗಿ ಮುಖಗವಸನ್ನು ಧರಿಸುವುದು, ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು.
ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಸರ್ಕಾರ , ಜಿಲ್ಲಾಡಳಿತ, ಪೋಲೀಸ್, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ, ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.
ಮನರಂಜನೆ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ಇತರೆ ಒಗ್ಗೂಡುವಿಕೆಗಳನ್ನು ಮತ್ತು ಬೃಹತ್ ಸಭೆ ಸಮಾರಂಭಗಳನ್ನು ನಿಷೇಧಿಸಿಲಾಗಿದ್ದು, ಜಾತ್ರೆಗಳು, ದೇವಾಲಯದ ಹಬ್ಬಗಳು, ಮೆರವಣಿಗೆ ಮತ್ತು ಸಭೆ ಸಮಾರಂಭಗಳಿಗೆ ಅನುಮತಿ ನೀಡಲಾಗಿರುವುದಿಲ್ಲ.
ಹಬ್ಬ ಹರಿದಿನಗಳು ಸಮಾಜದಲ್ಲಿ ಶಾಂತಿ , ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಈ ಸಭೆಯಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಿ.ಬಿ ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಯಾದಗಿರಿ ಸಿ.ಪಿ.ಐ ಸೋಮಶೇಖರ್ ಕೆಂಚಿರೆಡ್ಡಿ, ಸಮಾಜದ ಮುಖಂಡರಾದ ಸಿದ್ದಪ್ಪ ಎಸ್ ಹೊಟ್ಟಿ, ಅಯ್ಯಣ್ಣಾ ಹುಂಡೇಕಾರ, ಭವರಿಲಾಲ ಧೋಖಾ, ಲಾಯಕ ಹುಸೇನ್ ಬಾದಲ್, ಅಬ್ದುಲ್ ವಾಹಿದಮಿಯ್ಯ, ಶಿವಾಜಿ ಸೇನಾ ಸಂಸ್ಥಾಪಕ ಅಧ್ಯಕ್ಷ ಪರಶುರಾಮ ಶೇಗುರಕರ್ ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರರು ಉಪಸ್ಥಿತರಿದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ